Wednesday, May 15, 2024
spot_imgspot_img
spot_imgspot_img

ವಿಟ್ಲ: ಎಂಡೋಸಲ್ಫಾನ್ ಸಂತ್ರಸ್ತೆಯ ಅತ್ಯಾಚಾರ ಪ್ರಕರಣ; ಆರೋಪಿಗೆ 10 ವರ್ಷಗಳ ಕಠಿಣ ಶಿಕ್ಷೆ

- Advertisement -G L Acharya panikkar
- Advertisement -

ವಿಟ್ಲ: ಎಂಡೋಸಲ್ಫಾನ್ ಪೀಡಿತೆಯ ಮೇಲೆ ಅತ್ಯಾಚಾರ ವೆಸಗಿದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಪ್ರೀತಿ ಕೆ.ಪಿ. 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ರಾಜೇಶ್ ರೈ (33) ಶಿಕ್ಷೆಗೊಳಗಾದ ಆರೋಪಿಯಾಗಿದ್ದಾನೆ. ಆರೋಪಿ ರಾಜೇಶ್ 2015ರ ಅ.1ರಂದು ತನ್ನದೇ ಊರಿನ 19 ವರ್ಷ ಪ್ರಾಯದ ಎಂಡೋಸಲ್ಫಾನ್ ಪೀಡಿತೆಯನ್ನು ಅತ್ಯಾಚಾರವೆಸಗಿದ್ದ ಎಂದು ಆರೋಪಿಸಲಾಗಿತ್ತು.

ಯುವತಿಯು ಮನೆಯಲ್ಲಿ ಒಬ್ಬಳೇ ಇರುವುದನ್ನು ತಿಳಿದುಕೊಂಡ ಆರೋಪಿಯು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ ಎನ್ನಲಾಗಿದೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಅಂದಿನ ಎಎಸ್ಪಿ ರಾಹುಲ್ ಕುಮಾರ್ ತನಿಖೆ ನಡೆಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾಯ್ದೆಯಡಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದು, ಅದರಲ್ಲಿ ಆರೋಪಿಯ ವಿರುದ್ಧ 27 ಸಾಕ್ಷಿದಾರರನ್ನು ಉಲ್ಲೇಖಿಸಿದ್ದು, ಅದರಲ್ಲಿ 14 ಸಾಕ್ಷಿದಾರರ ವಿಚಾರಣೆ ನಡೆದಿತ್ತು.

ಸೆ.7ರಂದು ನ್ಯಾಯಾಧೀಶರು ಆರೋಪಿಯನ್ನು ದೋಷಿ ಎಂದು ತೀರ್ಮಾನಿಸಿ ಭಾರತೀಯ ದಂಡ ಸಂಹಿತೆ ಕಲಂ 376(2)(ಎಲ್) ಅಡಿಯಲ್ಲಿ 10 ವರ್ಷದ ಕಠಿಣ ಸಜೆ ಹಾಗೂ 10,000 ರೂ. ದಂಡ, ಕಲಂ 448ರಡಿ 3 ತಿಂಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಅಲ್ಲದೆ ಸಂತ್ರಸ್ತೆಗೆ ಪರಿಹಾರ ನೀಡುವಂತೆ ಕಾನೂನು ಸೇವಾ ಪ್ರಾಧಿಕಾರಕ್ಕೆ ಆದೇಶ ನೀಡಿದ್ದಾರೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ ನಾಯಕ ವಾದಿಸಿದ್ದರು.

- Advertisement -

Related news

error: Content is protected !!