

ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ಒಂದಾಗಿರುವ ಹಾಗೂ ದಿನಂಪ್ರತಿ ಸಾವಿರಾರು ಭಕ್ತಾದಿಗಳು ಆಗಮಿಸುವ ಕ್ಷೇತ್ರಗಳಲ್ಲಿ ಒಂದಾದ ಕುಕ್ಕೆ ಸುಬ್ರಮಣ್ಯ ದೇವಸ್ಥಾನದಲ್ಲಿ ಮತ್ತೆ ಸೇವೆಗಳಿಗೆ ಅವಕಾಶ ನೀಡಲಾಗಿದೆ. ಕೋವಿಡ್‌ನಿಂದ ಹೇರಲಾಗಿದ್ದ ಸೇವೆಗಳ ನಿರ್ಬಂಧ ತೆರವು ಮಾಡಿ ಭಕ್ತಾದಿಗಳಿಗೆ ಅವಕಾಶ ಕಲ್ಪಿಸಿ ಕೊಡಲಾಗಿದೆ.
ರಾಜ್ಯದಲ್ಲಿ ಸೋಂಕು ತಗ್ಗಿದ ಹಿನ್ನೆಲೆಯಲ್ಲಿ ನಿರ್ಬಂಧಗಳನ್ನು ತೆರವು ಮಾಡಲಾಗಿದ್ದು, ಸೇವೆಗಳಿಗೆ ಅನುಮತಿ ನೀಡಲಾಗಿದೆ. ಈ ಹಿಂದೆ ಸರಕಾರದ ಆದೇಶದಂತೆ ಸೇವೆಗಳನ್ನು ರದ್ದು ಪಡಿಸಲಾಗಿತ್ತು. ಇದೀಗ ಕೊರೊನಾ ಪ್ರಕರಣಗಳ ತೀವ್ರತೆ ಇಳಿಕೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಸರಕಾರದ ಆದೇಶದಂತೆ ಧಾರ್ಮಿಕ ಸ್ಥಳಗಳಲ್ಲಿ ದರ್ಶನ ಮತ್ತು ಸೇವೆಗಳಿಗೆ ಅನುಮತಿ ನೀಡಲಾಗಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಪ್ರಕಟಣೆಯಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಈ ಹಿಂದಿನಂತೆ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ ಸೇರಿದಂತೆ, ಎಲ್ಲಾ ಸೇವೆಗಳನ್ನು ನೆರವೇರಿಸಲು ಭಕ್ತಾದಿಗಳಿಗೆ ಅವಕಾಶ ಕಲ್ಪಿಸಿ ಕೊಡಲಾಗಿದೆ. ಸೇವಾಕರ್ತರು ಕೋವಿಡ್ ಲಸಿಕೆ ಪಡೆದಿರುವ ಬಗ್ಗೆ ವರದಿ ಹಾಜರಿ ಪಡಿಸುವುದು ಮತ್ತು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ.










