ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕಾರಾಗೃಹದೊಳಗೆ ಸಿಸಿಬಿ ಪೊಲೀಸರು ದಿಢೀರ್ ದಾಳಿ ಮಾಡಿದ ಘಟನೆ ಶನಿವಾರ ಮುಂಜಾನೆ ನಡೆದಿದೆ.

ಖೈದಿಗಳು ಕಾರಾಗೃಹದಲ್ಲಿರುವ ಮೊಬೈಲ್ ಬಳಸುತ್ತಿದ್ದು, ಅಲ್ಲಿಂದಲೇ ಅಪರಾಧ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದರು. ಕಾರಾಗೃಹದಲ್ಲಿ ಖೈದಿಗಳು ಮಾದಕ ವಸ್ತುಗಳ ಸೇವನೆ ಮಾಡುತ್ತಿದ್ದರೆಂಬ ಮಾಹಿತಿಯನ್ನು ಆಧರಿಸಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ಸಿಸಿಬಿ ಪೊಲೀಸರು ಜೈಲಿನಲ್ಲಿನ ರೌಡಿ ಚಟುವಟಿಕೆಗಳನ್ನು ಹತ್ತಿಕ್ಕುವುದಕ್ಕಾಗಿ ಇಂದು ಮುಂಜಾನೆ ಪರಪ್ಪನ ಅಗ್ರಹಾರದ ಜೈಲಿಗೆ ಶ್ವಾನದಳದೊಂದಿಗೆ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಗಾಂಜಾ, ಗಾಂಜಾ ಸೇದುವ ಕೊಳವೆಗಳು, ಮೊಬೈಲ್ ಫೋನ್, ಸಿಮ್ಸ್ ಗಳು, ಚಾಕುಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಬೆಂಗಳೂರು ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ. ಇಂದು ಮುಂಜಾನೆ ಬೆಂಗಳೂರಿನ ಹಲವು ರೌಡಿಶೀಟರ್ ಗಳ ಮನೆಗಳ ಮೇಲೂ ಪೊಲೀಸರು ದಾಳಿ ನಡೆಸಿ ಮಾರಕಾಸ್ತ್ರ ಹಾಗೂ ಹಲವು ವಸ್ತುಗಳನ್ನು ಜಪ್ತಿ ಮಾಡಿರುವುದಾಗಿ ತಿಳಿದುಬಂದಿದೆ.











